ಚಿಕ್ಕಮಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕಾಫಿತೋಟಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಫಿಬೆಳೆಗಾರರ ಒಕ್ಕೂಟ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಬೇಟಿಮಾಡಿದ ಒಕ್ಕೂಟದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಇತ್ತೀಚಿನ ವರ್ಷಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಬೆಲೆಕುಸಿತ, ಬೆಳೆಕುಂಠಿತ, ಕಾರ್ಮಿಕರ ಕೊರತೆ, ಗಿಡಗಳಿಗೆ ರೋಗಬಾಧೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಂದ ಕಾಫಿಬೆಳೆಗಾರರು ಜರ್ಜರಿತರಾಗಿದ್ದಾರೆ. ಕಳೆದ ಜುಲೈ ತಿಂಗಳಿನಲ್ಲಿ ಸುರಿದ ಬಾರೀ ಮಳೆ ಮತ್ತು ಗಾಳಿಯಿಂದಾಗಿ ಕಾಫಿತೋಟಗಳಲ್ಲಿ ಗಿಡಗಳು ಅಕ್ಷರಶಃ ನಾಶವಾಗಿವೆ. ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಕಾಫಿ, ಕಾಳುಮೆಣಸು, ಅಡಿಕೆ ಮುಂತಾದ ಬೆಳೆಗಳು ಅಪಾರ ಪ್ರಮಾಣದಲ್ಲಿ ನಾಶವಾಗಿದ್ದು, ಇದರಿಂದಾಗಿ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ಅಳಲು ತೋಡಿಕೊಂಡರು.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಅಧಿಕಾರಿಗಳಿಂದ ಹಾನಿ ಸಮೀಕ್ಷೆ ನಡೆಸಿ, ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

೨೦೧೭ರ ಬೆಳಗಾವಿಯ ಅಧಿವೇಶನದಲ್ಲಿ ೧೦ ಎಕರೆವರೆಗೆ ಕಾಫಿಬೆಳೆಗಾರರು ಕಂದಾಯಭೂಮಿಯಲ್ಲಿ ಮಾಡಿರುವ ಸಾಗುವಳಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವ ನಿಯಮಗಳನ್ನು ರೂಪಿಸಿದ್ದು, ಅದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕು ಎಂದ ಪದಾಧಿಕಾರಿಗಳು ೧೦ ಎಕರೆ ಕಂದಾಯ ಭೂಮಿ ಒತ್ತುವರಿ ಮಾಡಿರುವ ಕಾಫಿಬೆಳೆಗಾರರಿಗೆ ಅದನ್ನು ಗುತ್ತಿಗೆ ಆಧಾರದಲ್ಲಿ ನೀಡಬೇಕು. ಗುತ್ತಿಗೆಯ ವಾರ್ಷಿಕ ಶುಲ್ಕವನ್ನು ಕಡಿಮೆ ಮಾಡಬೇಕು. ೧೯೬೪ರ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಸೆಕ್ಷನ್ ೧೯೨/ಎ ವ್ಯಾಪ್ತಿಯಿಂದ ಕಾಫಿ ಮತ್ತು ಇತರ ಬೆಳೆಗಾರರು ಹಾಗೂ ರೈತರನ್ನು ಹೊರಗಿಡಬೇಕು ಎಂದು ಆಗ್ರಹಿಸಿದರು.

ಸರ್ಫೇಸಿ ಕಾಯ್ದೆಯಿಂದ ಕಾಫಿತೋಟಗಳನ್ನು ಹೊರಗಿಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು. ಕಾಡಾನೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ನಷ್ಟ ಅನುಭವಿಸಿರುವ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕಾಫಿಬೆಳೆಗಾರರಿಗೆ ಪರಿಹಾರ ನೀಡುವುದರ ಜೊತೆಗೆ ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಮತ್ತು ಗೃಹಸಚಿವರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ಅವರನ್ನು ಇದೇ ವೇಳೆ ಕೆಜೆಎಫ್ ವತಿಯಿಂದ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಬೆಳ್ಳಿಪ್ರಕಾಶ್, ಮಾಜಿಶಾಸಕರಾದ ಜೀವರಾಜ್, ಎಚ್.ಎಂ.ವಿಶ್ವನಾಥ್, ಕೆಜಿಎಫ್ ಅಧ್ಯಕ್ಷ ಡಾ|ಎಚ್.ಟಿ.ಮೋಹನ್ ಕುಮಾರ್, ಉಪಾಧ್ಯಕ್ಷ ಎ.ಕೆ.ವಸಂತೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕೆರೆಮಕ್ಕಿ ಮಹೇಶ್, ಕೆ.ಬಿ.ಕೃಷ್ಣಪ್ಪ, ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಮ್, ಕಾಫಿಮಂಡಳಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ, ಆವತಿ ಬೆಳೆಗಾರರ ಸಂಘದ ಅಧ್ಯಕ್ಷ ಎಚ್.ಎನ್.ಶ್ರೀಧರ್, ಕಸಬಾ ಹೋಬಳಿ ಅಧ್ಯಕ್ಷ ಲಿಂಗಪ್ಪಗೌಡ ಹಾಜರಿದ್ದರು.