ಚಿಕ್ಕಮಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮತಾಂಧ ಕೊಲೆ ಆರೋಪಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.

ನಂತರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್ ಮಾತನಾಡಿ, ಹುಬ್ಬಳ್ಳಿಯ ನೇಹಾ ಹಿರೇಮಠ್ ಬರ್ಬರ ಹತ್ಯೆ ಮಾಡಿರುವ ಫಯಾಜ್‌ಗೆ ಕಠಿಣ ಶಿಕ್ಷೆ ಕೊಡಿಸಬೇಕು. ಈ ಘಟನೆ ಆದ ನಂತರ ಇಡೀ ರಾಜ್ಯದಲ್ಲಿ ಹಿಂದೂ ಮಹಿಳೆಯರು ಭಯದಿಂದ ಬದುಕುವಂತಹ ವಾತಾವರಣ ಸೃಷ್ಠಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳು, ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಮುಖಂಡರಾಗಿದ್ದರೂ ನನ್ನ ಮಗಳ ಸಾವಿಗೆ ನ್ಯಾಯಕೊಡಿಸಿ ಎಂದು ಕಾಂಗ್ರೆಸ್ ಸರ್ಕಾರದ ಮುಂದೆ ಅಂಗಲಾಚುವ ಸ್ಥಿತಿ ಬಂದಿದೆ ಎಂದರು.

ನಗರ ಬಿಜೆಪಿ ಅದ್ಯಕ್ಷ ಪುಷ್ಪರಾಜ್ ಮಾತನಾಡಿ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಫಯಾಜ್ ಎಂಬ ಮತಾಂಧ ಬರ್ಬರವಾಗಿ ಹತ್ಯೆಗೈದಿದ್ದಾನೆ. ಆರೋಪಿಯನ್ನು ಕೂಡಲೇ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್.ಲೋಕೇಶ್ ಮಾತನಾಡಿ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಮುಂದಿನ ದಿನಗಳು ಎಷ್ಟು ಭೀಕರವಾಗಿರುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು

ಮಹಿಳಾ ಮೋರ್ಚಾ ಮುಖಂಡರುಗಳಾದ ವೀಣಾ ಶೆಟ್ಟಿ, ಪುಷ್ಪ ರಾಜೇಂದ್ರ, ಚೈತ್ರ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಪವಿತ್ರ, ಅಂಕಿತಾ, ಹೇಮಾ ಸಿಂಗ್, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ಮುಖಂಡರುಗಳಾದ ಕೋಟೆ ರಂಗನಾಥ್, ಬೆಳವಾಡಿ ರವೀಂದ್ರ, ನೆಟ್ಟೆಕೆರೆಹಳ್ಳಿ ಜಯಣ್ಣ, ಮಧುಕುಮಾರ ರಾಜ್ ಅರಸ್ ಇತರರು ಭಾಗವಹಿಸಿದ್ದರು.

BJP protests to condemn Neha Hiremath’s murder