ಚಿಕ್ಕಮಗಳೂರು: ಏಪ್ರಿಲ್ ೨೬ ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮೀನಾ ನಾಗರಾಜ್ ಸಿ.ಎನ್ ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಹದ ಆರೋಗ್ಯ ನಮಗೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಆರೋಗ್ಯಕರ ಭವಿಷ್ಯಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡುವಂತೆ ತಿಳಿಸಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಪ್ರಜೆಗಳಿಗೆ ನೀಡಿರುವ ಹಕ್ಕು, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಶೇಕಡ ೭೮ರಷ್ಟು ಮತದಾನವಾಗಿದ್ದು,
ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಕಡ್ಡಾಯವಾಗಿ ಹಾಗೂ ನೈತಿಕ ಮತದಾನ ಮಾಡವ ಮೂಲಕ ಶೇಕಡ ೯೦ ಕ್ಕೂ ಹೆಚ್ಚು ಮತದಾನವಾಗಬೇಕು. ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಮತದಾನವನ್ನು ಏಕೆ ಮಾಡಬೇಕು, ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಮತದಾನವೆಂಬುದು ಸಂವಿಧಾನ ಎಲ್ಲಾ ಪ್ರಜೆಗಳಿಗೂ ನೀಡಿರುವ ಮಹತ್ವವಾದ ಹಕ್ಕು ಪ್ರತಿಯೊಬ್ಬರು ಏಪ್ರಿಲ್ ೨೬ ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು.
ಪ್ರತಿಯೊಂದು ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಅಂಗವಿಕಲರಿಗೆ ರ್‍ಯಾಂಪ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಮತದಾನದಲ್ಲಿ ಭಾಗವಹಿಸುವ ಮೂಲಕ ನಮ್ಮ ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕರಿಸಬೇಕೆಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಜಾಥ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.
Collector drives for voting awareness rally