ನವದೆಹಲಿ: ಗುಜರಾತ್‌  ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ವಿಚಾರ ಗಂಭೀರವಾಗಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ಜಮ್ಮು ಮತ್ತು ಕಾಶ್ಮೀರದ ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್ ಮತ್ತು ಎಐಸಿಸಿ ಕಾರ್ಯದರ್ಶಿ ರಂಜೀತ್ ರಂಜನ್ ನಿಯೋಗದಲ್ಲಿದ್ದರು. ಬಾಲಕಿಯೊಬ್ಬಳು ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ವಿಡಿಯೋವನ್ನು ಪ್ರಧಾನಿ ಶೇರ್ ಮಾಡಿದ್ದು, ಅದನ್ನೇ ಹಲವು ಕೇಂದ್ರ ಸಚಿವರು ಹಂಚಿಕೊಂಡಿದ್ದು, ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಬಳಸಿದ ಅಪರಾಧಿಗಳ ವಿರುದ್ಧ ನೀವು ಕಟ್ಟುನಿಟ್ಟಾದ  ಕ್ರಮವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ಭಾವಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ನೀವು ಶೀಘ್ರ ಕ್ರಮ ಕೈಗೊಳ್ಳುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಲಾಗಿದೆ.

ಒಂದು ಕಡೆ ಹೆಣ್ಣು ಮಕ್ಕಳು ಮುಂದೆ ಸಾಗಬೇಕು, ವಿದ್ಯಾವಂತರಾಗಬೇಕು ಎಂದು ಎಲ್ಲರೂ ಬಯಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ಅವರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ರಜನಿ ಪಾಟೀಲ್ ಆರೋಪಿಸಿದರು. ಈ ಸಂಬಂಧ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.

Congress files complaint with Election Commission against PM Modi: