ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಮತ್ತೆ ಹೆಚ್ಚಿಸುವ ಮೂಲಕ ನವರಾತ್ರಿಗೆ ಕರೆಂಟ್ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ  ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದಿದ್ದಾರೆ.

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.

ರಾಜ್ಯ  ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲ ಬೆಲೆ ಇಳಿಸದ ಕೇಂದ್ರದ  ಸರಕಾರದ ಹಾದಿಯಲ್ಲೇ ರಾಜ್ಯ  ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಅವರು ಹೇಳಿದ್ದಾರೆ.

ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರ್ಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವವಾಗಿದೆ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Electric shock for Navratri