ಬೆಂಗಳೂರು: ದೇಶದಲ್ಲಿ ಮತ್ತೆ ಮಹಾಮಾರಿ ಕೊರೋನಾ ಭೀತಿ ಆವರಿಸಿದ್ದು, ಚೀನಾದಲ್ಲಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊಸದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನ ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದೆ.

ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಐಎಲ್ ಐ/ಸಾರಿ ಪ್ರಕರಣಗಳಿಗೆ ಕೊವಿಡ್‌ ಟೆಸ್ಟ್‌ ಮಾಡಿಸುವುದು ಕಡ್ಡಾಯ. ಸೋಂಕಿನ ಲಕ್ಷಣ ಹೊಂದಿರುವವರು, ಖಚಿತ ಪ್ರಕರಣಗಳ ಸಂಪರ್ಕಿತರು ಇನ್ಮುಂದೆ ಕೋವಿಡ್​ ಪರೀಕ್ಷೆಗೆ ಒಳಪಡುವುದು ಕಡ್ಡಾಯ ಮಾಡಲಾಗಿದೆ.

Fear of corona again