ಬೆಂಗಳೂರು: ಇನ್ನೊಂದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದ್ದು, ಸೋಮವಾರದಿಂದ ಮಳೆ ಅಬ್ಬರ ಕಡಿಮೆಯಾಗಲಿದೆ. ಮತ್ತೆ ಜು.13ರಿಂದ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾನುವಾರವೂ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.

ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆ ಇದೆ. ಉಳಿದಂತೆ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ. ಜು.13ರಿಂದ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿಯೂ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಚ್‌ನ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿಯ ಕೊಲ್ಲೂರಿನಲ್ಲಿ ಅತಿ ಹೆಚ್ಚು 15 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ 13, ಗೇರುಸೊಪ್ಪದಲ್ಲಿ 12, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 11, ಹೊನ್ನಾವರ, ಶಿರಾಲಿ, ಗೋಕರ್ಣ, ಮಂಕಿಯಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rain today in Kodagu- Kodagu