ಬೆಂಗಳೂರು:  ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವ ಎನ್‌.ಎಸ್‌.ಬೋಸರಾಜ್‌ ಮತ್ತು ತಿಪ್ಪಣಪ್ಪ ಕಮಕನೂರು ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಜಗದೀಶ ಶೆಟ್ಟರ್‌, ನಂತರ ಎನ್‌.ಎಸ್‌.ಬೋಸರಾಜು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ತಿಪ್ಪಣಪ್ಪ ಕಮಕನೂರು ಅವರು ಕುಲದೇವತೆ ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮೂವರೂ ನೂತನ ಸದಸ್ಯರಿಗೆ ಸಭಾಪತಿ ಬಸವರಾಜ ಹೊರಟ್ಟಿಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸಭಾಪತಿಗಳು ನೂತನ ಸದಸ್ಯರಿಗೆ ಸದನದ ನಿಯಮಾವಳಿ ಒಳಗೊಂಡ ಕಿಟ್‌ ಹಸ್ತಾಂತರಿಸಿದರು.

ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‌ನ ಮೂರು ಸದಸ್ಯ ಸ್ಥಾನಗಳಿಗೆ ಇತ್ತಿಚೆಗೆ ನಡೆದ ನಡೆದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಈ ಮೂವರೂ ನಾಯಕರು, ಪ್ರತಿಪಕ್ಷಗಳಿಂದ ಯಾವುದೇ ಅಭ್ಯರ್ಥಿಗಳು ಕಣಕ್ಕಿಳಿಯದ ಕಾರಣ ಮೇಲ್ಮನೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಪ್ರಮಾಣ ವಚನ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್‌.ಕೆ.ಪಾಟೀಲ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್‌, ವಿಧಾನ ಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮಿ ಉಪಸ್ಥಿತರಿದ್ದರು

ಕಾಂಗ್ರೆಸ್ಸಿನ ಮೊದಲ ಗ್ಯಾರಂಟಿಗೆ ಬಿಜೆಪಿಗರಲ್ಲಿ ನಡುಕ: ನಾವು ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿಗೆ ಬಿಜೆಪಿಗರಲ್ಲಿ ನಡುಕ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್‌ ಸದಸ್ಯ ಜಗದೀಶ ಶೆಟ್ಟರ್‌ ಹೇಳಿದರು. ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಇದನ್ನು ಗಮನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಲೇ ನಡುಕ ಆರಂಭವಾಗಿದೆ. ಅದೇ 5 ಗ್ಯಾರಂಟಿ ಯೋಜನೆಗಳು ಜಾರಿಯಾದರೆ ಇವರೆಲ್ಲ ಮನೆಯಲ್ಲಿಯೇ ಕುಳಿತುಕೊಳ್ಳುವ ಸ್ಥಿತಿ ಎದುರಾಗಲಿದೆ ಎಂದು ಭವಿಷ್ಯ ನುಡಿದರು.

ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬಂದರೆ ಅದು ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ಕನಿಷ್ಠ 6 ತಿಂಗಳ ಕಾಲವಕಾಶ ಬೇಕು. ಆದರೆ, ನಾವು ಅಧಿಕಾರಕ್ಕೆ ಬಂದು ಇನ್ನೂ 1 ತಿಂಗಳು ಕಳೆದಿಲ್ಲ. ಆಗಲೇ ಬಿಜೆಪಿ ನಾಯಕರು ಅಕ್ಕಿ ನೀಡುತ್ತಿಲ್ಲ ಎಂದು ಬೊಬ್ಬೆ ಹೊಡೆಯುತ್ತಿರುವುದು ಹಾಸ್ಯಾಸ್ಪದ. ರಾಜಕೀಯದಲ್ಲಿ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೋರಾಟ ಮನೋಭಾವ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಾಯಕತ್ವದಲ್ಲಿ ನಾವು ಘೋಷಿಸಿರುವ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಮುಂದಿನ 5 ವರ್ಷಗಳ ಆನಂತರವೂ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Jagdish Shettar and three new members of the Legislative Council took oath