ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಜೂ.೧೫ ಮತ್ತು ೧೬ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ ೨೦೨೪ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸುವುದು ಉತ್ಸವದ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮವನ್ನು ಉದ್ಯಮದೊಳಗೆ ಪಾಲುದಾರರನ್ನು ತೊಡಗಿಸಿಕೊಳ್ಳಲು ಉದ್ದಿಮೆದಾರನ್ನು ಸೆಳೆಯುವ ನಿಟ್ಟಿನಲ್ಲಿ ಹೂಡಿಕೆದಾ ರರ ಸಭೆ, ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಆಹಾರ ಪದ್ಧತಿ, ಪ್ರವಾಸೋದ್ಯಮ ಕೊಡುಗೆಗಳನ್ನು ವಿಶ್ಲೇಷಿಸಿ ತೋರಿಸುವ ಪ್ರದ ರ್ಶನ, ಸಮ್ಮೇಳನಗಳು, ಸಂವಹನ, ನೆಟ್‌ವರ್ಕಿಂಗ್ ಅವಕಾಶಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆಗಳು ಸಂವಾದಗಳು ನಡೆಯಲಿವೆ ಎಂದು ತಿಳಿಸಿದರು.

ದಕ್ಷಿಣ ಭಾರತ ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಉತ್ತೇಜಿಸುವುದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಿಗೆ ಮಾಡಲು ಆಸಕ್ತ ಎಂಎಸ್‌ಎಂಗಳನ್ನು ಆಹ್ವಾನಿಸಲಾಗಿದೆ ಎಂದ ಅವರು ಕರ್ನಾಟಕ ಪ್ರವಾಸೋದ್ಯಮ ಆರ್ಥಿಕ ಸಮೃದ್ದಿ ಮತ್ತು ಸಾಮಾಜಿಕ ಪ್ರಗತಿಯ ಪ್ರತೀಕವಾಗಿದ್ದು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ ಎಂದರು.

ಚಿಕ್ಕಮಗಳೂರಿನಲ್ಲಿನ ಪ್ರವಾಸೋದ್ಯಮವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಮಲ್ಯೇಷಿಯಾದ ಜೆಂಟಿಂಗ್, ಡಿನ್ನಿಲ್ಯಾಂಡ್ ಮಾದರಿ ಯಂತೆ ದೊಡ್ಡ ಅಮ್ಯುಸ್ಮೆಂಟ್ ಪಾರ್ಕ್ ನಿರ್ಮಿಸುವ ಗುರಿ ಹೊಂದಲಾಗಿದೆ. ರಸ್ತೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ಮಾಣ, ಬಯಲುಸೀಮೆ ಪ್ರದೇಶದಲ್ಲಿ ಕೈಗಾರಿಕೆಗಳ ನಿರ್ಮಾಣ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಅಭಿವೃದ್ದಿಗೊಳಿಸಲಾಗುವುದು ಎಂದು ತಿಳಿಸಿದರು.

ಕೆ.ಶಿವಷಣ್ಮುಗ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ ಆದರೆ. ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಮೂಲಭೂತ ಸೌಲಭ್ಯ ಒದಗಿಸಲು ಸರ್ಕಾರ ಮುಂದಾಗುತ್ತಿಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಪ್ರವಾಸೋದ್ಯಮ ಅಭಿವೃದ್ದಿಪಡಿಸಲು ಮುಂದಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಎಂ.ಜಿ.ಬಾಲಕೃಷ್ಣ, ಉಮಾರೆಡ್ಡಿ, ಬಿ.ವಿ.ಗೋಪಾಲರೆಡ್ಡಿ, ಎಸ್. ನಂಜುಂಡ ಪ್ರಸಾದ್, ಜಿ.ಕೆ.ಶೆಟ್ಟಿ ಇದ್ದರು.

Jr. 15 South India Festival at Bangalore Palace Grounds -2024