ಚಿಕ್ಕಮಗಳೂರು : ಜಿಲ್ಲೆಯಲ್ಲಿ ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಹಾಗೂ ಅವರ ಪೋಷಕರು ಕೂಡ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಡೆದ ಸಾಂತ್ವಾನ, ಸ್ವದಾರ, ಹಾಗೂ ಮಹಿಳ ಮತ್ತು ಮಕ್ಕಳ ದೌರ್ಜನ್ಯ ಹಾಗೂ ಮತ್ತಿತರ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿಶೇಷವಾದ ಕಾರ್ಯಕ್ರಮವನ್ನು ನೀಡುತ್ತಿದೆ. ಅವುಗಳನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಸಿಗುವಂತೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಿ ಕೆಲಸ ಮಾಡಬೇಕು ಹಾಗೂ ಎಲ್ಲ ಅಂಗನವಾಡಿ ಕೇಂದ್ರಗಳ ಮೂಲಕ ನೀಡುವ ಕಾರ್ಯಕ್ರಮಗಳು ಗುಣಮಟ್ಟದಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಮಹಿಳಾ ದೌರ್ಜನ್ಯ ತಡೆಗಟ್ಟಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಜಾಗೃತಿವಹಿಸಿ, ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಳ್ಳುವಂತೆ ಸೂಚಿಸಿದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಪತ್ತೆ ಹಚ್ಚಿ, ಅರಿವು ಮೂಡಿಸುವಂತೆ ತಿಳಿಸಿದರು.

ಅಂಗನವಾಡಿ, ಶಾಲೆಗಳ ಕಟ್ಟಡಗಳ ದುರಸ್ಥಿ ಕಾರ್ಯ, ವಿದ್ಯುತ್, ಶೌಚಾಲಯ ಮತ್ತಿತರ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮಗಳ ಕ್ರಿಯಾ ಯೋಜನೆಯಲ್ಲಿ ಸೇರಿಸಿ ಗುಣ ಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬಾಲ್ಯವಿವಾಹ ಹೆಚ್ಚು ಪ್ರಕರಣಗಳು ಪತ್ತೆಯಾದ ತಾಲ್ಲೂಕುಗಳಲ್ಲಿ ಬಾಲ್ಯ ವಿವಾಹದ ಬಗ್ಗೆ ಇರುವ ಕಠಿಣ ಕಾನೂನಿನ ತಿಳುವಳಿಕೆ ಮೂಡಿಸಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ  ಕಾರ್ಯ ನಿರ್ವಹಿಸಬೇಕು. ಶಾಲಾ, ಕಾಲೇಜುಗಳಲ್ಲಿ ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ವ್ಯಾಪಕ ಪ್ರಚಾರ ಕೈಗೊಂಡು ಇದರ ಸಂಪೂರ್ಣ ನಿವಾರಣೆಗೆ ಮುಂದಾಗಬೇಕು ಎಂದು ಸೂಚಿಸಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇಸೂರಿನಡಿಯಲ್ಲಿ ಆರೋಗ್ಯ, ಪೊಲೀಸ್ ಮತ್ತಿತರ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಜತೆಗೆ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ನ್ಯಾಯ ಒದಗಿಸುವ ಕೆಲಸವನ್ನ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್. ಸೋಮ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳು ಇರುವ ಕಾನೂನನ್ನು ಸದ್ಬಳಕೆಯನ್ನು ಮಾಡಿಕೊಂಡು  ಜಿಲ್ಲೆ, ತಾಲ್ಲೂಕಿನಲ್ಲಿರುವ ಪ್ರಾಧಿಕಾರದ ಮೂಲಕ ಅರಿವು, ಸಲಹೆಗಳನ್ನು ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ. ಜಿ. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಪಂಚಾಯತ್ ಯೋಜನೆ ನಿರ್ದೇಶಕರು, ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ, ಕಸ್ತೂರಿ ಬಾ ಸದನದ  ಮೋಹಿನಿ ಸಿದ್ಧೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪರಿಸರ ಸ್ವಚ್ಚವಾಗಿದ್ದಾಗ ಉತ್ತಮ ಆರೋಗ್ಯ