ಚಿಕ್ಕಮಗಳೂರು: ಈ ಬಾರಿಯ ಮಹಾತ್ಮ ಗಾಂಧಿ ಜನ್ಮ ದಿನವನ್ನು ಸ್ವಚ್ಛ ಭಾರತ ದಿನ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತೆ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಇದೇ ಸೆ.೧೫ ರಿಂದ ಅ.೨ ರವರೆಗೆ ದೇಶದಾದ್ಯಂತ ಸ್ವಚ್ಛ ಭಾರತ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸ್ವಚ್ಛತೆಯೇ ದೈವತ್ವ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಂತಿಮವಾಗಿ ಅ.೨ ರಂದು ಗಾಂಧಿಜಯಂತಿ ದಿನ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಮುಕ್ತಾಯವಾಗಲಿದೆ. ಈ ಕಾರ್ಯಕ್ರಮ ಅನುಷ್ಠಾನದಲ್ಲಿ ರಾಜ್ಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ ಎಂದು ಹೇಳಿದರು.

ಸೆ.೧೫ ರಂದು ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಇಲ್ಲಿಯವರೆಗೆ ಇಡೀ ಜಿಲ್ಲೆಯಾದ್ಯಂತ ವಿದ್ಯಾರ್ಥಿನಿಯರು, ಮಹಿಳೆಯರು, ವೃತುಚಕ್ರ ನಿರ್ವಹಣೆ ಸೇರಿದಂತೆ ವಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ಸ್ವಚ್ಛತೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಅವಧಿಯಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಛತೆ ನಿರ್ವಹಣೆ ಕುರಿತು ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಪ್ರತಿ ಗ್ರಾ.ಪಂ ಮಟ್ಟದಲ್ಲಿ ಪರಿಸರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಅ.೧ ರಂದು ನಗರಕ್ಕೆ ಸಮೀಪದ ಕೈಮರ ತನಿಖಾ ಠಾಣೆಯಿಂದ ದತ್ತಪೀಠದ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗುವುದು, ಈ ಕಾರ್ಯಕ್ರಮವನ್ನು ಅ.೧ ರಂದು ನಗರದ ಪಾಲಿಟೆಕ್ನಿಕ್ ಬಳಿ ಉದ್ಘಾಟಿಸಲಿದ್ದು, ಸಾರ್ವಜನಿಕರು, ಸಂಘಸಂಸ್ಥೆಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಲಯನ್ಸ್ ಸಂಸ್ಥೆ ಭಾಗವಹಿಸಲಿವೆ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಮನವಿ ಮಾಡುವಂತೆ ತಿಳಿಸಿದರು.

ಪ್ರಸಕ್ತ ವರ್ಷ ಕಸಮುಕ್ತ, ತ್ಯಾಜ್ಯ ಮುಕ್ತ ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ ಸ್ವಚ್ಚ-ಸುಂದರ-ಸದೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷಿಯನ್ನು ಹೊಂದಲಾಗಿದೆ. ಕಳೆದ ವರ್ಷದಂತೆಯೇ ಗ್ರಾಮಗಳ ಸ್ವಚ್ಛತೆಗೆ ಸ್ವಯಂ ಪ್ರೇರಿತರಾಗಿ ಶ್ರಮಧಾನ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ಸಹ ಭಾಗವಹಿಸುವಂತೆ ವಿನಂತಿಸಿದರು.

ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಬಸ್ ನಿಲ್ದಾಣ, ರೈಲು ನಿಲ್ದಾಣ, ಕೆರೆ-ಹಳ್ಳ-ನದಿತೀರ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಕಲ್ಯಾಣಿಗಳು, ಚರಂಡಿಗಳು ಮತ್ತು ನಾಲಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆ ಮತ್ತು ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದರು.

ಸರ್ಕಾರಿ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಬೇಕೆಂಬ ದೃಷ್ಟಿಯಿಂದ ಜಿಲ್ಲೆಯ ೨೨೪ ಆಸ್ಟೆಲ್‌ಗಳಲ್ಲಿ ’ಕಾಳಜಿ’ ಆಪ್‌ನ್ನು ಪರಿಚಯಿಸಿದ್ದು, ಇದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಮೂಲಕ ಸೌಲಭ್ಯಗಳಿಲ್ಲದಿರುವುದನ್ನು ಶೀಘ್ರವಾಗಿ ಗುರ್ತಿಸಿ ಇತ್ಯರ್ಥಪಡಿಸಲು ಗುಣಮಟ್ಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಯೋಜನಾ ನಿರ್ದೇಶಕಿ ಅಪೂರ್ವ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಸೋಮಶೇಖರ್, ಉಪಸ್ಥಿತರಿದ್ದರು.

Zilla Panchayat Chief Executive Dr. B. Gopalakrishna press conference